ನವದೆಹಲಿ, ಏ. 25: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 17ರಿಂದ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.
ಶನಿವಾರ 3,49,691 ಹೊಸ ಕೊರೊನಾ
ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 2,17,113 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,69,60,172ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಶನಿವಾರ 2,767 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 1,92,311ಕ್ಕೆ ಏರಿಕೆ ಆಗಿದೆ. ಈವರೆಗೆ ದೇಶಾದ್ಯಂತ ಒಟ್ಟು 14,09,16,417 ಜನರಿಗೆ ಲಸಿಕೆ ಹಾಕಲಾಗಿದೆ.
ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.
ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು. ನಂತರ ಏಪ್ರಿಲ್ 5ರಂದು 96,982, ಏಪ್ರಿಲ್ 6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736, ಏಪ್ರಿಲ್ 13ರಂದು 1,84,372, ಏಪ್ರಿಲ್ 14ರಂದು 2,00,739, ಏಪ್ರಿಲ್ 15ರಂದು 2,17,353, ಏಪ್ರಿಲ್ 16ರಂದು 2,34,692, ಏಪ್ರಿಲ್ 17ರಂದು 2,61,500 ಏಪ್ರಿಲ್ 18ರಂದು 2,73,810, ಏಪ್ರಿಲ್ 19ರಂದು 2,59,170, ಏಪ್ರಿಲ್ 20ರಂದು 2,95,041, ಏಪ್ರಿಲ್ 21ರಂದು 3,14,835, ಏಪ್ರಿಲ್ 22ರಂದು 3,32,730 ಹಾಗೂ ಏಪ್ರಿಲ್ 23ರಂದು 3,46,786 ಪ್ರಕರಣಗಳು ಪತ್ತೆಯಾಗಿದ್ದವು. ಈಗ ಏಪ್ರಿಲ್ 24ರಂದು 3,49,691 ಹೊಸ ಪ್ರಕರಣಗಳು ಕಂಡುಬಂದಿವೆ.