ಮೋದಿ ವೈಫಲ್ಯವನ್ನು ಮುಚ್ಚಿಹಾಕಲು ಯಡಿಯೂರಪ್ಪ ರಾಜ್ಯದ ಹಿತ ಬಲಿಕೊಡುತ್ತಿದ್ದಾರೆ; ಸಿದ್ದರಾಮಯ್ಯ ಕಿಡಿ

ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ? ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

MAshok Kumar | news18-kannada
Updated:September 3, 2020, 9:22 PM IST
ಮೋದಿ ವೈಫಲ್ಯವನ್ನು ಮುಚ್ಚಿಹಾಕಲು ಯಡಿಯೂರಪ್ಪ ರಾಜ್ಯದ ಹಿತ ಬಲಿಕೊಡುತ್ತಿದ್ದಾರೆ; ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ.
  • Share this:
ಬೆಂಗಳೂರು (ಸೆಪ್ಟೆಂಬರ್‌ 03); ಕೊರೋನಾ ಆರ್ಥಿಕ ಮುಗ್ಗಟ್ಟಿನ ಕಾರಣದಿಂದಾಗಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪಾವತಿಸಬೇಕಾಗಿದ್ದ ಜಿಎಸ್‌ಟಿ ಪರಿಹಾರವನ್ನು ನೀಡಲು ಸಾಧ್ಯವಿಲ್ಲ. ಬೇಕಿದ್ದರೆ ಸಾಲವನ್ನು ಪಡೆದುಕೊಳ್ಳಿ ಎಂದು ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಹೇಳಿದ್ದಾರೆ. ಕೇಂದ್ರ ಸರ್ಕಾರದ ಈ ನೀತಿಯ ವಿರುದ್ಧ ಹಲವಾರು ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವ ಮೂಲಕ ತಮ್ಮ ಪಾಲಿನ ತೆರಿಗೆ ಬಾಕಿಯನ್ನು ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಮಾತ್ರ ಜಿಎಸ್‌ಟಿ ಬಾಕಿ ಕೇಳುವುದರ ಬದಲಿ ತಮ್ಮ ಸರ್ಕಾರ ಸಾಲ ಪಡೆಯಲು ಸಿದ್ದ ಎಂದು ಈಗಗಾಗಲೇ ಘೋಷಿಸಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರವನ್ನು ಟ್ವೀಟ್‌ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, "ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಕರ್ನಾಟಕದ ಮುಖ್ಯಮಂತ್ರಿ ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ. ಇದು ಜಿಎಸ್‌ಟಿ ಮೋಸ" ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಮತ್ತು ಜಿಎಸ್‌ಟಿ ಹಣ ನೀಡಲು ಸಾಧ್ಯವೇ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮಾಡುವ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯ, "ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ರಾಜ್ಯದ ಹಿತವನ್ನು ಬಲಿಗೊಡುತ್ತಿದ್ದಾರೆ. ರಾಜ್ಯ ಮತ್ತು‌ ಕೇಂದ್ರ ಸರ್ಕಾರ ಜನತೆಗೆ ಬಗೆದಿರುವ ದ್ರೋಹವನ್ನು‌ ಕಾಂಗ್ರೆಸ್ ಪಕ್ಷ ವಿಧಾನಮಂಡಲದ‌ ಅಧಿವೇಶನದಲ್ಲಿ ಬಿಚ್ಚಿಡಲಿದೆ" ಎಂದು ಕಿಡಿಕಾರಿದ್ದಾರೆ.ಇದೇ ಸಂದರ್ಭದಲ್ಲಿ ಸಾಲದ ಕುರಿತು ತಕರಾರು ತೆಗೆದಿರುವ ಅವರು"ಹೊಸ ಸಾಲದ ಹೊರೆ ರೂ.11,324 ಕೋಟಿಗಷ್ಟೇ ಸೀಮಿತವೇ? ಇದು ಒಟ್ಟು ಜಿಎಸ್ ಟಿ ಪರಿಹಾರ 97,000 ಕೋಟಿಯಲ್ಲಿ ರಾಜ್ಯದ ಪಾಲು ಅಷ್ಟೆ. ಇದರ ಜೊತೆ ಕೊರೊನಾದಿಂದಾಗಿ ಜಿಎಸ್ ಟಿ ಒಟ್ಟು ನಷ್ಟ ರೂ.2,35,000 ಕೋಟಿ ಎಂದು ಅಂದಾಜು ಮಾಡಲಾಗಿದೆ. ಇದನ್ನು ಕೇಂದ್ರ ತುಂಬಿಕೊಡಲಿದೆಯೇ? ರಾಜ್ಯವೇ ಸಾಲ‌ಮಾಡಬೇಕೇ?2020-21ರ ಅಂತ್ಯಕ್ಕೆ ರೂ.3,68,692 ಕೋಟಿ ಸಾಲದ ಅಂದಾಜನ್ನು ಕರ್ನಾಟಕದ ಮುಖ್ಯಮಂತ್ರಿ  ಬಜೆಟ್‌ನಲ್ಲಿ ನೀಡಿದ್ದರು. ಈಗ ಕೊರೋನಾದಿಂದ ತೆರಿಗೆ ಸಂಗ್ರಹ ಕುಸಿದಿದೆ, ವಿತ್ತೀಯ ಕೊರತೆ ಹೆಚ್ಚಲಿದೆ, ಇವೆಲ್ಲದ್ದಕ್ಕೂ ಸಾಲ ಮಾಡಲು ಹೊರಟರೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಸಾಲದ ಮಿತಿ ಶೇ.25 ಅನ್ನು ಮೀರಲಾರದೇ?" ಎಂದು ಪ್ರಶ್ನಿಸಿದ್ದಾರೆ.ಇನ್ನೂ "ಸಾಲ ಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರಿಗೆ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ?  ಇದು ಜಿಎಸ್‌ ಟಿ ಮೋಸ. ಅಲ್ಲದೆ, ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಕರ್ನಾಟಕದ ಮುಖ್ಯಮಂತ್ರಿ ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ" ಎಂದು ಕಿಡಿಕಾರಿದ್ದಾರೆ.
Published by: MAshok Kumar
First published: September 3, 2020, 9:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading